
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗೊಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ–ಚಿಕ್ಕಬಳ್ಳಾಪುರ ಹೆದ್ದಾರಿಯ ಚೆನ್ನದೇವಿ ಅಗ್ರಹಾರದ ಭಾರತ್ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಕಾರಿನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಅತಿವೇಗದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಾಹನ ನುಜ್ಜುಗೊಜ್ಜಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ಸಂಪೂರ್ಣ ದೃಶ್ಯ ಪೆಟ್ರೋಲ್ ಬಂಕ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಡಿಕ್ಕಿಯ ಭೀಕರತೆ ದೃಶ್ಯಗಳಲ್ಲಿ ಸ್ಪಷ್ಟವಾಗಿ ಕಾಣಿಸಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಸಿಬ್ಬಂದಿ, ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…