ಆನೆಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ನಂತರ ಪಟಾಕಿ ಅನಾಹುತದಲ್ಲಿ ಗಾಯಾಳುಗಳಾಗಿ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮತ್ತು ತಮ್ಮ ಮಕ್ಕಳು ಹಾಗೂ ಕುಟುಂಬದವರನ್ನು ಕಳೆದುಕೊಂಡ ಸಂಬಂಧಿಕರ ಜೊತೆ ಮಾತನಾಡಿ, ಸಂತೈಸಿದರು.
ಇದೇ ವೇಳೆ ವೈದ್ಯರ ತಂಡದ ಜೊತೆ ಸಮಗ್ರವಾಗಿ ಚರ್ಚಿಸಿ ಅಗತ್ಯ ಇರುವ ಎಲ್ಲಾ ಚಿಕಿತ್ಸಾ ಸವಲತ್ತುಗಳನ್ನು ಗಾಯಾಳುಗಳಿಗೆ ಒದಗಿಸುವಂತೆ ಸೂಚನೆ ನೀಡಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಶಿವಣ್ಣ ಸೇರಿದಂತೆ ಮತ್ತಿತರರು ಜತೆಗಿದ್ದರು.