
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಧಗಧಗನೆ ಹೊತ್ತಿ ಉರಿಯುತ್ತಿದ್ದ ಬೆಂಕಿ ಅರಣ್ಯದೊಳಗೆ ವೇಗವಾಗಿ ವ್ಯಾಪಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಭಯಗೊಂಡಿದ್ದರು.
ವಿಷಯ ತಿಳಿಯುತ್ತಿದ್ದಂತೆಯೇ ಹೊಸಹಳ್ಳಿ ಠಾಣೆಯ ನೂತನ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು.
ಗಂಟೆಗಳ ಕಾಲ ಶ್ರಮಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಅರಣ್ಯದ ಹೆಚ್ಚಿನ ಭಾಗಕ್ಕೆ ಬೆಂಕಿ ವ್ಯಾಪಿಸದಂತೆ ತಡೆಗಟ್ಟಲಾಯಿತು. ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಅರಣ್ಯ ಪ್ರದೇಶದಲ್ಲಿ ಬೆಂಕಿ ನಂದಿಸಲು ಪೊಲೀಸರು ಸ್ವತಃ ಮುಂದಾಗಿ ಮಾನವೀಯತೆ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯರು ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.