ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹಾಳಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ಆದರೆ ಮಾಧ್ಯಮಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ತೋರಿಸಬೇಕು ಎಂದು ಹೇಳಿದರು.
ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಅನ್ಯಾಯದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡು. ಪ್ರಹ್ಲಾದ್ ಜೋಶಿ ಹೇಳಿಕೆಗೆ ಸೋ ಕಾಲ್ಡ್ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಉಸಿರೇ ಬಿಡ್ತಿಲ್ಲವಲ್ಲ ಏಕೆ? ಎಂದು ಪ್ರಶ್ನಿಸಿದರು.
ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ ಎಂದರು.
ರೈತರಿಗೆ ಶೇ4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿ ಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದು ಹೇಳಿದರು.
ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಇದೆಂಥಾ ದ್ವಂದ್ವ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಬಿಜೆಪಿಯವರು ಅನ್ಯಾಯ – ಅನ್ಯಾಯ ಎಂದು ನಾಟಕವಾಡುತ್ತಾ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
ಮೊದಲಿಗೆ ರಾಜ್ಯದ ಜನರಿಗೆ ಏಳು ಕೆ.ಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆ.ಜಿ ಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ತೆಗೆಸಿಕೊಂಡಿದ್ದು. ಅಶೋಕ್ ಅವರ ಪ್ರತಿಭಟನೆ ಫೋಟೊ ಶೂಟ್ ನಂತೆ ಕಾಣುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಎಂದು ಫೋಟೋ ತೆಗೆಸಿಕೊಳ್ಳುತ್ತಾ ಇದ್ದಾರೆ ಎಂದರು.
ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು.
ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದೆ, ಇದನ್ನು ಆರ್.ಬಿ.ಐ ಒಪ್ಪಿಲ್ಲ ಎಂದು ಸಚಿವರು ಉತ್ತರವನ್ನೂ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳಗೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ ಅಸಹಾಯಕತೆಯನು ವ್ಯಕ್ತಪಡಿಸಿದರೆ ಹೇಗೆ? ಎಂದು ಕೇಳಿದರು.
ನಬಾರ್ಡ್ ನಲ್ಲಿ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲಕ್ಕಾಗಿ ನೀಡಲಾಗಿತ್ತು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ. 58% ರಷ್ಟು ಕಡಿಮೆ ಮಾಡಿರುವುದು ರೈತರಿಗೆ ಮಾಡಿರುವ ದ್ರೋಹ. ನಬಾರ್ಡ್ ಮೂಲಕ 4.50% ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. 5 ವರ್ಷಗಳ ಅಂಕಿಅಂಶಗಳನ್ನು ತೆಗೆದು ನೋಡಿದರೆ 5,000 ಕೋಟಿ ರೂ.ಗಳಿದೆ. ಸಾಲ ಕೊಡುವುದು ಯಾವಾಗಲೂ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ. ಎಲ್ಲಾ ರಾಜ್ಯಗಳಿಗೂ ಕಡಿತ ಮಾಡಲಾಗಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವರಿಸಲಾಗಿದೆ. ಆರು ವರ್ಷಗಳಿಂದ ಜಾಸ್ತಿ ಕೊಟ್ಟಿದ್ದು, ಈಗ ಕಡಿಮೆ ಮಾಡಿದರೆ ಹೇಗೆ? ಎಂದರು.
ನಮ್ಮ ಸರ್ಕಾರದ ವತಿಯಿಂದ 5 ಲಕ್ಷದವರೆಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದೆ. ರೈತರ ಪರವಾಗಿ 4.50% ಬಡ್ಡಿ ಕೊಡುವುದು ನಮ್ಮ ಸರ್ಕಾರ. ದೀರ್ಘಾವಧಿ ಮತ್ತು ಮಧ್ಯಮಾವಧಿ ಸಾಲವನ್ನು 5-15 ಲಕ್ಷದವರೆಗೆ 3% ಬಡ್ಡಿದರದಲ್ಲಿ ನೀಡಲಾಗುತ್ತಿದೆ. ₹1,200 ಕೋಟಿಗಳಿಗಿಂತಲೂ ಹೆಚ್ಚು ಬಡ್ಡಿಯನ್ನು ನೀಡುತ್ತೇವೆ. ಈ ಬಗ್ಗೆ ಆರ್.ಅಶೋಕ್, ಬಿ.ಎಸ್.ಯಡಿಯೂರಪ್ಪ, ಯತ್ನಾಳ್, ಸಿ.ಟಿ.ರವಿ, ಹೆಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡುವುದಿಲ್ಲ ಎಂದು ಹೇಳಿದರು.
ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು ಬೇರೆಯಾರನ್ನೂ ಬಿಪಿಎಲ್ ಕಾರ್ಡಿನಿಂದ ತೆಗೆಯಬೇಡಿ ಎಂದು ಸೂಚಿಸಿದ್ದೇನೆ. ಬಿಜೆಪಿಯವರು ರಾಜಕೀಯಕ್ಕಾಗಿ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ರಾಜ್ಯಸಭೆಯಲ್ಲಿ ಮಂಡಿಸಿದಾಗ ಮುರಳಿ ಮನೋಹರ್ ಜೋಶಿ ಅವರು ಅದನ್ನು ವಿರೋಧಿಸಿ ಭಾಷಣ ಮಾಡಿದ್ದಾರೆ. ಅದು ಆಹಾರ ಭದ್ರತಾ ಕಾಯ್ದೆಯಲ್ಲ, ಮತ ಭದ್ರತಾ ಕಾಯ್ದೆ ಎಂದು ಕರೆದಿದ್ದರು. ಅಂದರೆ ಆಹಾರ ಭದ್ರತಾ ಕಾಯ್ದೆಗೆ ಅವರು ವಿರೋಧವಾಗಿದ್ದರು. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ? ಎಂದು ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಕೊಟ್ಟಿದ್ದು ನಮ್ಮ ಸರ್ಕಾರ. 7 ರಿಂದ 5 ಕೆ.ಜಿಗೆ ಇಳಿಸಿದ್ದು ಬಿ.ಎಸ್.ಯಡಿಯೂರಪ್ಪ. ಆಗ ಆರ್.ಅಶೋಕ್ ಅವರು ಸಚಿವ ಸಂಪುಟದಲ್ಲಿದ್ದರು. 2 ಕೆ.ಜಿಯನ್ನು ಕಡಿಮೆ ಮಾಡಿದಾಗ ಯಾಕೆ ಉಸಿರೆತ್ತಲಿಲ್ಲ? ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ ಬಿಜೆಪಿ ಬಡವರ ಬಗ್ಗೆ ಮಾತನಾಡುತ್ತಾರೆ. ಆಹಾರ ಪದಾರ್ಥಗಳನ್ನು ಉಚಿತವಾಗಿ ಕೊಡಬೇಕೆಂದು ಯೋಜನೆ ಜಾರಿಗೆ ತಂದಿದ್ದು ನಾವು. ಸರ್ಕಾರಿ ನೌಕರರು, ತೆರಿಗೆದಾರರಿಗೆ ಬಿಪಿಎಲ್ ಕಾರ್ಡು ಕೊಡಬಾರದು ಎಂದು ಹೇಳಿದ್ದೇವೆ. ಈ ಯೋಜನೆ ಮಾಡಿರುವುದು ಬಡವರಿಗಾಗಿ. ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರೇ? ಎಂದು ಪ್ರಶ್ನಿಸಿದರು.
ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾಡಿದ್ದಾರಾ? ಎಸ್.ಸಿ.ಎಸ್.ಪಿ/ಟಿಎಸ್.ಪಿ ಕಾಯ್ದೆಯನ್ನು ಎಲ್ಲಿಯಾದರೂ ಜಾರಿಗೆ ತಂದಿದ್ದಾರೆಯೇ? ಬಿಜೆಪಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ ಎಂದರು.
ಗ್ಯಾರಂಟಿಗಳಿಗೆ ದುಡ್ಡಿಲ್ಲ ಎಂದು ರಾಜ್ಯ ಬಿಜೆಪಿ ಬಳಿ ಸಾಲ ಕೇಳಿಲ್ಲ. ಯಾವುದಕ್ಕೆ ಹಣವಿಲ್ಲ ಎಂದು ಹೇಳಿ? ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆ ಅಷ್ಟೇ ಎಂದರು.