ಅರ್ಹ ಅಭ್ಯರ್ಥಿಗಳು ‘ಯುವನಿಧಿ’ಗೆ ನೋಂದಾಯಿಸಿ

ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಗೆ ಮುಖ್ಯಮಂತ್ರಿಗಳು ದಿನಾಂಕ 26-12-2023 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.

ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ, ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು  ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.Karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ.

ಪದವಿ, ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ 1800-599-9918 ಇಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *