ಅಲ್ಪ ಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರ ಸಮಸ್ಯೆ, ಮನವಿ, ಬೇಡಿಕೆಗಳನ್ನು ಕಾನೂನು ಅಡಿಯಲ್ಲಿ ಬಗೆಹರಿಸಲು ಆಯೋಗವು ಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಸಮುದಾಯದವರ ಕುಂದು-ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಸಿಗುವ ಸೌಲಭ್ಯವು ಅಲ್ಪಸಂಖ್ಯಾತ ಸಮುದಾಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಸಂವಿಧಾನದ ಅಡಿಯಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಅಲ್ಪಸಂಖ್ಯಾತರ ಕಲ್ಯಾಣ ಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು ಆಯೋಗದ ಜವಾಬ್ದಾರಿಯಾಗಿರುತ್ತದೆ. ಕುಂದು ಕೊರತೆ ಸಭೆಗಳನ್ನು ಏರ್ಪಡಿಸುವುದರಿಂದ ಸಮುದಾಯದಲ್ಲಿನ ಸಮಸ್ಯೆಗಳನ್ನು ಅರಿತು ಶೀಘ್ರ ಬಗೆಹರಿಸಬಹುದು ಎಂದು ಅವರು ಹೇಳಿದರು.
ಜಮೀನು ಖಾತೆ ಬದಲಾವಣೆ, ಸ್ಮಶಾನ ಜಾಗ ಗುರುತಿಸುವಿಕೆ, ಜಮೀನು ಸರ್ವೆ ಕಾರ್ಯ ವಿಳಂಬ, ಅಕ್ರಮ ಭೂ ಕಬಳಿಕೆ, ವಕ್ಫ್ ಆಸ್ತಿ ಹದ್ದುಬಸ್ತು, ಉರ್ದು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ದೂರು, ಅಹವಾಲುಗಳನ್ನು ಅಲ್ಪಸಂಖ್ಯಾತ ಸಮುದಾಯದವರು ಸಲ್ಲಿಸಿದರು.
ಕುಂದು ಕೊರತೆ ಸಭೆ ನಂತರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಶೇ.15 ರಷ್ಟನ್ನು ಅಲ್ಪಸಂಖ್ಯಾತರಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಕಾಯ್ದಿರಿಸಿ, ನೀಡಲಾಗಿರುವ ಸೌಲಭ್ಯಗಳ ಕುರಿತು 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ.ಅನುರಾಧ.ಕೆ.ಎನ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೊ ಸ್, ಆಯೋಗದ ವಿಶೇಷಾಧಿಕಾರಿ ಮುಜೀಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.