ಜಿಲ್ಲೆಯಲ್ಲಿರುವ ಆಹಾರ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿ ಎಂದು ಆಹಾರ ಸುರಕ್ಷತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲನೆ ಮಾಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ , ಪರವಾನಗಿ ಪಡೆಯದೇ ನಡೆಸುವ ಆಹಾರ ಉದ್ದಿಮೆಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಿ, ನಿಯಮಿತವಾಗಿ ಸಂಶಯಾಸ್ಪದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದು ಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ ಜಿಲ್ಲೆಯಲ್ಲಿ 5548 ನೋಂದಣಿ ಹಾಗೂ 1505 ಪರವಾನಿಗೆ ಪಡೆದ ಆಹಾರ ಉದ್ದಿಮೆಗಳು ಇದೆ ಎಂದು ಸಭೆಗೆ ಮಾಹಿತಿ ನೀಡಿದರು.
ದೂರು ನೀಡಿ
ಜಿಲ್ಲೆಯ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮೊಬೈಲ್ ಸಂಖ್ಯೆ 9901961771, ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು ಮೊಬೈಲ್ ಸಂಖ್ಯೆ 9845511663, ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್ ಮೊಬೈಲ್ ಸಂಖ್ಯೆ 9731837210, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್ ಮೊಬೈಲ್ ಸಂಖ್ಯೆ 8884393910, ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ರವಿಕುಮಾರ್ ಮೊಬೈಲ್ ಸಂಖ್ಯೆ 9845580486 ಇವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ.
ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪ್ರವೀಣ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿಗಳು ಉಪಸ್ಥಿತರಿದ್ದರು.