
ಇಂದಿನಿಂದ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭವಾಗಿದೆ. ಈ ಹಿನ್ನೆಲೆ ಈಗಾಗಲೇ ರೈತರಿಂದ ಪೂರ್ವ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಹೋರಿಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ ಕಾರ್ಯ ನಡೆದಿದ್ದು, ಹೋರಿಗಳನ್ನು ತಂದು ಮಾರಾಟ ಹಾಗೂ ಪ್ರದರ್ಶನಕ್ಕೆ ಇರಿಸಲಾಗಿದೆ….

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು, ಆಂಧ್ರಪ್ರದೇಶದ ಹಿಂದೂಪುರ, ಅನಂತಪುರ, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಿದ್ದಾರೆ…

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಿದ್ದಾರೆ.

ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗಿರುತ್ತದೆ…

ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ವಿಶೇಷ ಹಿನ್ನೆಲೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು, ಅಪಘಾತ ತಡೆಗಟ್ಟಲು, ವಾಹನಗಳ ಸುಗಮ ಸಂಚಾರ, ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳಲಾಯಿತು…ಹಾಗೂ ಇತರೆ ಕ್ರಮಗಳನ್ನು ಕೈಗೊಳ್ಳಲಾಯಿತು…