ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

“ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು” ಎಂದು ದರ್ಪದ ಮಾತು ಹೇಳಿದ್ದಾರೆ ಡಿಸಿಎಂ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ! ಎಂದಿದ್ದಾರೆ.

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಹೇಳಿದ್ದಾರೆ.

“ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ” ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

 ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ಎಂದಿದ್ದಾರೆ.

ನಾಡಪ್ರಭು ಶ್ರೀ ಕೆಂಪೇಗೌಡರು, ಶ್ರೀ ಕೆಂಗಲ್‌ ಹನುಮಂತಯ್ಯನವರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್‌ ಎಸ್ಟೇಟ್‌ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್?‌ ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago