ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ: ಸತತ 2ನೇ ಬಾರಿ ಚಾಂಪಿಯನ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು.

ಗುಜರಾತ್ ಪರ ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆರ್‌ಸಿಬಿ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು.

156 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭದಿಂದಲೇ ಆತ್ಮವಿಶ್ವಾಸದ ಬ್ಯಾಟಿಂಗ್ ಕಂಡುಬಂದಿತು. ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಜೇಯ 75 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರೆ, ವೆಂಕಟೇಶ್ ಅಯ್ಯರ್ 32 ರನ್‌ಗಳ ಕೊಡುಗೆ ನೀಡಿದರು. ಇದರ ಫಲವಾಗಿ ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿ 5 ವಿಕೆಟ್‌ಗಳ ಗೆಲುವು ದಾಖಲಿಸಿತು.

ಈ ಜಯದೊಂದಿಗೆ ಆರ್‌ಸಿಬಿ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದು ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಆರ್ ಸಿ‌ಬಿ ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮನೆ ಮಾಡಿದ್ದು, ಎಲ್ಲೆಡೆ ಅಭಿಮಾನಿಗಳು ಕುಣಿದು ಕುಪ್ಪಳಿಸಿ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!