
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತಾಲ್ಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕನ್ನಡ ಜಾಗೃತ ಪರಿಷತ್ತಿನಲ್ಲಿ ನಡೆದ 2025–26ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಉತ್ತಮ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಸಮಾಜದ ಆಗುಹೋಗುಗಳ ಅರಿವು ಮೂಡುತ್ತದೆ ಎಂದು ಹೇಳಿದರು.
ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವ ಉದ್ದೇಶದಿಂದ ಸಂಘಟನೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದ್ದು, ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸನ್ಮಾನಿಸಲಾಯಿತು. ಇಂತಹ ಗೌರವಗಳು ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಲಿವೆ ಎಂದರು.
ನಾಡು, ನುಡಿ ಹಾಗೂ ಜಲದ ವಿಚಾರದಲ್ಲಿ ಕನ್ನಡಿಗರ ಧ್ವನಿಯಾಗಿ ಸಂಘಟನೆ ಮುಂದೆಯೂ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ದಿವಂಗತ ಆರ್.ಜಿ. ವೆಂಕಟಾಚಲಯ್ಯ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಕನ್ನಡದ ಕಟ್ಟಾಳುಗಳಾದ ಟಿ. ಕೇಶವ ಹಾಗೂ ಮಲ್ಲೇಶ್ ಅವರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವು ಸಾಧಕರನ್ನು ಸಹ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ರಾಜ್ಯ ಖಜಾಂಚಿ ಚೇತನ್ ಗೌಡ, ರಾಜ್ಯ ಮುಖಂಡ ಪಿ. ವಾಸು, ನರೇಂದ್ರ, ಜಿಲ್ಲಾ ಕಾರ್ಯಾಧ್ಯಕ್ಷ ಪ್ರದೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ತಾಯೇಗೌಡ, ಅಲ್ತಾಫ್ ಪಾಷಾ, ರಂಜಿತ್ ಗೌಡ, ವಿನಯ ಆರಾಧ್ಯ, ಉದಯ್ ಕುಮಾರ್, ಅಂಬರೀಶ್, ಶಿವಾನಂದ್, ಲಕ್ಷ್ಮೀನಾರಾಯಣ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.