ಕನ್ನಡ ನಾಡು ನುಡಿ ಉಳಿವಿಗಾಗಿ ನಡೆಯುವ ಪ್ರತಿಯೊಂದು ಹೊರಾಟಕ್ಕೂ ಕನ್ನಡಿಗರಾಗಿ ನಮ್ಮ ಬೆಂಬಲ ಸದಾ ಇರಬೇಕು. ಆಡಳಿತ ವಿಚಾರದಲ್ಲೂ ಸಹ ಅಧಿಕಾರಿಗಳು ಕನ್ನಡ ಪರ ಹೋರಾಟಕ್ಕೆ ಬೆಂಬಲಕ್ಕೆ ನಿಲ್ಲಬೇಕೆಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಡಾ.ರಾಜಕುಮರ್ ಕಲಾಮಂದಿರದಲ್ಲಿ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು. ಸ್ವಾತಂತ್ರ‍್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.
ಕ್ರಿ.ಶ.450ರ ಕನ್ನಡ ಭಾಷೆಯ ಮೊಟ್ಟ ಮೊದಲ ಹಲ್ಮಿಡಿ ಶಾಸನದಲ್ಲಿ ಕನ್ನಡದ ಪದಗಳಿವೆ. ಕ್ರಿ.ಶ. 850 ರ ಕನ್ನಡದ ಮೊಟ್ಟ ಮೊದಲ ಗ್ರಂಥ ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ವಿಸ್ತಾರದ ಬಗ್ಗೆ ಉಲ್ಲೇಖವಿದೆ. 21ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನಿಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ. ಆದ್ದರಿಂದ, ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆ ಎಂದರು.
ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.
ಮಾಧ್ಯಮ ಕ್ಷೇತ್ರದಲ್ಲಿ ಗಂಗರಾಜು, ಯಕ್ಷಗಾನ ಕ್ಷೇತ್ರದಲ್ಲಿ ದೀಕ್ಷಾ ಕಂಠಿ, ರಂಗಭೂಮಿ ಕ್ಷೇತ್ರದಲ್ಲಿ ಎಂ.ಜಿ ರಾಮಚಂದ್ರ, ಸಮಾಜ ಸೇವೆ ಕ್ಷೇತ್ರದಲ್ಲಿ ಅನ್ನಪೂರ್ಣ, ಕನ್ನಡಪರ ಹೋರಾಟಗಾರರಾದ ಸುರೇಶ್ ಸೇರಿದಂತೆ ಒಟ್ಟು 14 ಮಂದಿ ಗಣ್ಯರಿಗೆ ಸನ್ಮಾನಿಸಲಾಯಿತು.
ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾ.ಪಂ ಇಒ ಮುನಿರಾಜು, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಹೋರಾಟಗಾರರು, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.