ಕನ್ನಡ ಭಾಷೆ ಬಳಸಿ ಕನ್ನಡಾಭಿಮಾನ ಮೆರೆಯಬೇಕು- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡಾಭಿಮಾನ ಮೆರೆಯಬೇಕಾಗಿದೆ. ಕನ್ನಡ ಭಾಷೆಯನ್ನು ಬಳಸಿದಾಗ ಮಾತ್ರ ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು  ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಶ್ರೀ ವಾಣಿ ಪದವಿಪೂರ್ವ ಕಾಲೇಜಿನಲ್ಲಿ    ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆ ಮತ್ತು ಐಚ್ಛಿಕ ಕನ್ನಡ ವಿಷಯದಲ್ಲಿ 100 ಅಂಕಗಳಿಗೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಮಾತೃಭಾಷೆಗೆ ಅಪಾರ ಶಕ್ತಿ ಇರುತ್ತದೆ. ಮಾತೃಭಾಷೆಯ ಮೂಲಕ ಕಲಿಯುವಾಗ ಕಲಿಕೆಯು ಹೆಚ್ಚು ಪರಿಣಾಮಕಾರಿ ಆಗಿರುತ್ತದೆ. ಭಾಷಾ ಸಂಪತ್ತು ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ ಆಗಲಿದೆ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡವೇ ಶಿಕ್ಷಣ ಮಾಧ್ಯಮವಾಗಬೇಕು.  ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ಶಿಕ್ಷಣದವರೆಗೂ ಕನ್ನಡದಲ್ಲೇ ಬೋಧನೆ, ಸಂಶೋಧನೆ ನಡೆಯಬೇಕಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ  ಭವ್ಯ ಪರಂಪರೆ ಇದೆ. ಈ ಭವ್ಯ ಪರಂಪರೆಯನ್ನು ಮುಂದುವರೆಸಲು ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.

ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು  ಉತ್ತಮ ಸಾಧನೆ ಮಾಡಲು ಅವಕಾಶವಿದೆ. ಸಾಧನೆ ಮಾಡುವ ಪ್ರತಿಭಾವಂತರಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅವಕಾಶಗಳಿಗೆ. ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಾದ  ಎನ್.ಶ್ರೀನಿವಾಸ್, ಬಾಲಕೃಷ್ಣ, ಶಶಾಂಕ್, ಮುನಿರಾಜು,  ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಭಾರತ ಸೇವಾದಳ ಅಧಿಕಾರಿ ಎಸ್.ಬೋರಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿಗಳಾದ ಕೋದಂಡರಾಮ್, ಷಫೀರ್, ಕಸಬಾ ಹೋಬಳಿ ಕಸಾಪ  ಘಟಕದ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಗಿರೀಶ್ ಬರಗೂರು, ತೂಬಗರೆ ಕಸಾಪ ಘಟಕದ ಗೌರವ ಕಾರ್ಯದರ್ಶಿ ಉದಯರಾಧ್ಯ, ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *