
ದೊಡ್ಡಬಳ್ಳಾಪುರ: ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ನಡು ರಸ್ತೆಯಲ್ಲೇ ಸಮವಸ್ತ್ರ ಹರಿದು ದರ್ಪ ಮೆರೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ನಡೆದಿದೆ.
ನಾಸಿರ್ ಅಹಮದ್ ಎಂಬಾತ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ನಾಗರಾಜ್ ಎಂಬ ಪೊಲೀಸ್ ಸಿಬ್ಬಂದಿ ಹಲ್ಲೆಗೊಳಗಾದವರಾಗಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆಯ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಮಾಹಿತಿಯ ಪ್ರಕಾರ, ನಾಸಿರ್ ಅಹಮದ್ ಚಲಾಯಿಸುತ್ತಿದ್ದ ಕಾರು ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಾಗರಾಜ್, ಗಾಯಗೊಂಡ ದ್ವಿಚಕ್ರ ವಾಹನ ಸವಾರನಿಗೆ ನೆರವಾಗಿದ್ದಾರೆ. ಈ ವೇಳೆ ಕಾರನ್ನು ರಸ್ತೆ ಬದಿಗೆ ನಿಲ್ಲಿಸುವಂತೆ ನಾಗರಾಜ್ ಸೂಚಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಕೋಪಗೊಂಡ ಕಾರು ಚಾಲಕ ನಾಸಿರ್ ಏಕಾಏಕಿ ಪೊಲೀಸ್ ಸಿಬ್ಬಂದಿ ನಾಗರಾಜ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕರ ಎದುರೇ ಪೊಲೀಸರನ್ನು ಎಳೆದಾಡಿ, ಸಮವಸ್ತ್ರ ಹರಿದು ಹಲ್ಲೆ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಎಫ್‌ಐಆರ್ ದಾಖಲಿಸದಿದ್ದೇಕೆ?
ಪೊಲೀಸ್ ಸಿಬ್ಬಂದಿ ಮೇಲೆಯೇ ಸಾರ್ವಜನಿಕವಾಗಿ ಹಲ್ಲೆ ನಡೆದಿದ್ದರೂ ದೊಡ್ಡಬಳ್ಳಾಪುರ ನಗರ ಪೊಲೀಸರು ಕೇವಲ ಎನ್‌ಸಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರ ಸ್ವರೂಪದ ಘಟನೆ ನಡೆದಿದ್ದರೂ ಎಫ್‌ಐಆರ್ ದಾಖಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದೇಕೆ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.
ಪೊಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾದ ಇಲಾಖೆಯೇ ನಿರ್ಲಕ್ಷ್ಯ ವಹಿಸಿದರೆ ಸಾರ್ವಜನಿಕರಿಗೆ ಯಾವ ಸಂದೇಶ ರವಾನೆಯಾಗುತ್ತದೆ ಎಂಬ ಚರ್ಚೆ ಶುರುವಾಗಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧೆಡೆ ಪೊಲೀಸರ ಮೇಲೆ ಹಲ್ಲೆ ನಡೆಸುವ ಘಟನೆಗಳು ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪೊಲೀಸರ ಮೇಲೆಯೇ ಹಲ್ಲೆ ನಡೆಸುವ ಮಟ್ಟಕ್ಕೆ ಕಿಡಿಗೇಡಿಗಳ ಧೈರ್ಯ ಹೆಚ್ಚುತ್ತಿರುವುದಕ್ಕೆ ಪೊಲೀಸ್ ಇಲಾಖೆಯ ಮೃದು ಧೋರಣೆಯೇ ಕಾರಣವೇ ಎಂಬ ಪ್ರಶ್ನೆಯೂ ಎದುರಾಗಿದೆ.
ಜನಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲವೇ? ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.