ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಕಾಡತಿಪ್ಪೂರು ಗ್ರಾಮದ ಅರಸಮ್ಮ (45) ಮೃತ ಮಹಿಳೆ. ಬೆಂಗಳೂರಿನಿಂದ ತಂದು ಹಾಕಲಾಗುವ ಕಸವನ್ನು ವಿಂಗಡಣೆ ಮಾಡುವ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಅರಸಮ್ಮ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಕಸ ವಿಂಗಡಣೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೈ-ಕಾಲುಗಳಿಗೆ ತೀವ್ರ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಸುರಕ್ಷತಾ ಕ್ರಮಗಳ ಕುರಿತು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!