ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿರುವ ಹಗರಣಗಳ ತನಿಖೆಗೆ ಒತ್ತಾಯಿಸಿದ ಶ್ರೀರಾಮಸೇನೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇತ್ತೀಚೆಗೆ ಸಾಕಷ್ಟು ಅವ್ಯವಹಾರ ಹಗರಣಗಳು ಬೆಳಕಿಗೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಅಂಬೇಡ್ಕರ್ ನಿಗಮದ ಅನುದಾನ ದುರ್ಬಳಕೆ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಾದ ದೇವರಾಜ್ ಅರಸು ನಿಗಮದ ಹಗರಣಗಳ ಬಗ್ಗೆ ದಿನಪತ್ರಿಕೆಗಳು ಮತ್ತು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ಶ್ರೀರಾಮ ಸೇನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಸ್.ರಮೇಶ್ ಗೌಡ ಹೇಳಿದರು.

ಇತ್ತೀಚೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ನಿಷ್ಪಕ್ಷಪಾತವಾಗಿ ಶಿಕ್ಷಿಸಿ ರಾಜ್ಯದ ಬೊಕ್ಕಸಕ್ಕೆ ದುರ್ಬಳಕೆ ಮಾಡಿಕೊಂಡಿರುವ ತೆರಿಗೆದಾರರ ಹಣವನ್ನು ಮರಳಿಸುವಂತೆ ಕೋರಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಗುಡುಗಿದರು.

ನಂತರ ರಾಘವೇಂದ್ರ ಗುರುಪೀಠದ ಶ್ರೀನಿವಾಸ್ ಗೂರೂಜಿ ಮಾತನಾಡಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ನಿಗಮಗಳಿಗೆ ಮೀಸಲಿಟ್ಟ ಕೋಟ್ಯಂತರ ರೂಪಾಯಿ ದುರುಪಯೋಗವಾಗಿದೆ. ಈ ಎಲ್ಲಾ ಹಗರಣಗಳ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಮತ್ತು ದುರುಪಯೋಗಪಡಿಸಿಕೊಂಡ ಸಾರ್ವಜನಿಕ ತೆರಿಗೆ ಹಣವನ್ನು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹಿಂತಿರುಗಿಸಬೇಕೆಂದು ಎಂದು ಆಗ್ರಹಿಸಿದರು.

ಈ ವೇಳೆ ಶ್ರೀರಾಮಸೇನೆಯ ಜಿಲ್ಲಾ ಪ್ರಧಾನ‌‌ ಕಾರ್ಯದರ್ಶಿ ಆನಂದ್ ಆರ್, ಚಂದ್ರಕಲಾ‌, ಪದ್ಮಾವತಿ, ಜಯರಾಮಯ್ಯ ಸೇರಿದಂತೆ ಶ್ರೀರಾಮಸೇನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!