ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಮನೆ ಮೇಲೆ ಇಡಿ ದಾಳಿ: ಕ್ಯೋಟ್ಯಂತರ ನಗದು, 6.75 ಕೆಜಿ ಚಿನ್ನ, ಬ್ಯಾಂಕ್ ಠೇವಣಿ ಪತ್ತೆ, ಜಪ್ತಿ

ಉತ್ತರ ಕನ್ನಡ, ಕಾರವಾರ: ಅಕ್ರಮ ಕಬ್ಬಿಣದ ಅದಿರು ರಫ್ತು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇಡಿ) ಕಾರವಾರ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಎರಡು ದಿನಗಳ ಕಾಲ ನಡೆದ ಈ ಶೋಧ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ಇಡಿ  ವಶಪಡಿಸಿಕೊಳ್ಳಲಾಗಿದೆ.

ಇಡಿ ಬೆಂಗಳೂರು ಘಟಕದ ಅಧಿಕಾರಿಗಳು ಆಗಸ್ಟ್ 13 ಮತ್ತು 14ರಂದು ಕರ್ನಾಟಕದ ಕಾರವಾರ ಶಾಸಕ ಸತೀಶ್ ಸೈಲ್ ಮನೆ ಮತ್ತು ಇನ್ನಿತರ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದ್ದರು.

ಈ ದಾಳಿಯ ಸಮಯದಲ್ಲಿ, ₹1.68 ಕೋಟಿ ನಗದು ಹಾಗೂ 6.75 ಕೆಜಿ ತೂಕದ ಚಿನ್ನಾಭರಣ ಮತ್ತು ಬಂಗಾರದ ಗಟ್ಟಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಸುಮಾರು ₹14.13 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಲಾಗಿದೆ (frozen) ಎಂದು ಇಡಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ತನಿಖೆ ನಡೆಯುತ್ತಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಸತೀಶ್ ಸೈಲ್ ಮತ್ತು ಇತರರ ವಿರುದ್ಧ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದ ತನಿಖೆ ಮುಂದುವರಿದಿದೆ. ಶೋಧದ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳು, ಇ-ಮೇಲ್‌ಗಳು ಮತ್ತು ಇತರ ಸಾಕ್ಷ್ಯಗಳನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!