ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡರ ಹೆಸರನ್ನು ಶಾಶ್ವತವಾಗಿ ಉಳಿಸುವ ಉದ್ದೇಶದಿಂದ ಸರ್ಕಾರ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತಿಳಿಸಿದರು.

ಮಾಗಡಿ ಸಮೀಪ ಕೆಂಪೇಗೌಡರ ಆಯ್ಕೆ ಸ್ಥಳದಲ್ಲಿ 10 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ 5.5 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಗತಿಯಲ್ಲಿದ್ದು, ಮಾಗಡಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಅಭಿವೃದ್ಧಿಗೆ ಸೂಚನೆ ನೀಡಲಾಗಿದೆ ಎಂದರು.

ಕೆಂಪೇಗೌಡರ ಹೆಸರಿನಲ್ಲಿ ಕಾಲೇಜು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು, ಕೆಂಪೇಗೌಡ ಭವನದ ಹೊಸ ಬ್ಲೂಪ್ರಿಂಟ್‌ನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಅವರ ಪ್ರತಿಮೆಯನ್ನು ಇನ್ನಷ್ಟು ಆಕರ್ಷಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಜೊತೆಗೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕೆಂಪೇಗೌಡರ ಪುತ್ಥಳಿಗಳನ್ನು ನಿರ್ಮಿಸುವ ಕುರಿತು ಚಿಂತನೆ ನಡೆದಿದ್ದು, ಈ ಕಾರ್ಯದ ಜವಾಬ್ದಾರಿಯನ್ನು ಸಚಿವ ಕೃಷ್ಣ ಬೈರೇಗೌಡ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಇನ್ನು ಮುಂದೆ ಕೆಂಪೇಗೌಡ ಜಯಂತಿಯನ್ನು ಕೇವಲ ವಿಧಾನಸೌಧಕ್ಕೆ ಸೀಮಿತಗೊಳಿಸದೇ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿವರ್ಷ ಒಂದೊಂದು ಕ್ಷೇತ್ರದಲ್ಲಿ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದರು.

ನಗರದ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ, ಮುಂದಿನ ಎರಡು ವರ್ಷಗಳಲ್ಲಿ ಮೆಟ್ರೋ ವಿಸ್ತರಣೆಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, ಸುಮಾರು 500 ಕಿಲೋಮೀಟರ್ ಮೆಟ್ರೋ ಜಾಲ ವಿಸ್ತರಣೆಯ ಗುರಿ ಹೊಂದಲಾಗಿದೆ. ಸರ್ಕಾರದ ಅವಧಿಯಲ್ಲೇ ಈ ಯೋಜನೆಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಇದೇ ವೇಳೆ ಬಿಡದಿ ಕುರಿತ ಪ್ರಶ್ನೆಯನ್ನು ಮಾಧ್ಯಮಗಳು ಕೇಳಿದಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ನಿರ್ಗಮಿಸಿದರು.

Leave a Reply

Your email address will not be published. Required fields are marked *

error: Content is protected !!