ಕೆಮ್ಮಣ್ಣುಗುಂಡಿ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ನ.25ರಿಂದ ಅನಿರ್ದಿಷ್ಟಾವಧಿ ಧರಣಿ

 

ದೊಡ್ಡಬಳ್ಳಾಪುರ: ನಗರದ ವಿವಾದಿತ ಕೆಮ್ಮಣ್ಣುಗುಂಡಿ ಸಾರ್ವಜನಿಕ ಸ್ಮಶಾನದ ರಸ್ತೆಯನ್ನು ಪ್ರಭಾವಿಯೊಬ್ಬರು ಅತಿಕ್ರಮಿಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದ ತಾಲೂಕು ಆಡಳಿತದ ನಿರ್ಲಕ್ಷ್ಯ ಖಂಡಿಸಿ ನ.25ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ಕೆಮ್ಮಣ್ಣುಗುಂಡಿ ಸಾರ್ವಜನಿಕ ಸ್ಮಶಾನ ಹೋರಾಟ ಸಮಿತಿ ನಿರ್ಧರಿಸಿದೆ.

ನಗರದ ಕನಕ ಭವನದಲ್ಲಿ ಹೋರಾಟ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಸಮಿತಿ ಮುಖಂಡರಾದ ಸಂಜೀವ್ ನಾಯಕ್, ಸು. ನರಸಿಂಹಮೂರ್ತಿ, ಡಿ.ಪಿ. ಆಂಜನೇಯ ಹಾಗೂ ರವಿಕುಮಾರ್, ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಒತ್ತುವರಿ ತೆರವುಗೊಳಿಸುವಂತೆ ಹಲವು ವರ್ಷಗಳಿಂದ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಲಾಗಿದೆ. ಈ ಸಂಬಂಧ ಹಲವು ಬಾರಿ ಪ್ರತಿಭಟನೆಗಳನ್ನೂ ನಡೆಸಲಾಗಿದೆ. ಆದರೂ ಸ್ಥಳೀಯ ಆಡಳಿತ ಒತ್ತುವರಿದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಕಂದಾಯ ಇಲಾಖೆ ಅಧಿಕಾರಿಗಳು ಹೋರಾಟ ಸಮಿತಿ ಸಲ್ಲಿಸಿರುವ ದೂರು ಅರ್ಜಿಗಳಿಗೆ ಸೂಕ್ತ ಸ್ಪಂದನೆ ನೀಡದೆ, ಸಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅಧಿಕಾರಿಗಳು ಒತ್ತುವರಿದಾರರೊಂದಿಗೆ ಶಾಮೀಲಾಗಿರುವ ಅನುಮಾನವೂ ಮೂಡಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪ್ರಮುಖರ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕ ಸ್ಮಶಾನಕ್ಕೆ ತೆರಳುವ ರಸ್ತೆಯನ್ನೇ ಒತ್ತುವರಿ ಮಾಡಿಕೊಂಡಿರುವ ಗಂಭೀರ ಸಮಸ್ಯೆಯ ಬಗ್ಗೆ ಅಧಿಕಾರಿಗಳು ನಿರಂತರ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ಜಿಲ್ಲಾ ಮತ್ತು ತಾಲೂಕು ಆಡಳಿತದ ವಿರುದ್ಧ ನ.25ರಿಂದ ಅನಿರ್ದಿಷ್ಟಾವಧಿ ನಿರಶನ ಆರಂಭಿಸಲಾಗುವುದು. ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರಿಗೆ ಸ್ಮಶಾನದ ರಸ್ತೆ ಬಳಕೆಗೆ ಮುಕ್ತಗೊಳಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಹೋರಾಟ ಸಮಿತಿ ಮುಖಂಡರಾದ ಅರುಣ್ ಕುಮಾರ್, ನವೀನ್ ಕುಮಾರ್, ಮುದ್ದುಕೃಷ್ಣ, ಶ್ರೀನಿವಾಸ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!