ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆಗರ ಕೆರೆಯಲ್ಲಿ ನಡೆದಿದೆ.
ಕೆಂಗೇರಿಯ ಉಪನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದಂತಹ ಒಟ್ಟು 11 ಜನ ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲೆಂದು ಹೋಗಿದ್ದರು, ಅದರಲ್ಲಿ ಇಬ್ಬರು ವಿದ್ಯಾರ್ಥಿಗಳು ಈಜು ಬಾರದೇ ಮೃತಪಟ್ಟಿರುವ ಘಟನೆ ನಡೆದಿದೆ.
ಪೃಥ್ವಿರಾಜ್ ಮತ್ತು ನವೀನ್ ಮೃತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಈ ಇಬ್ಬರು ಹುಡುಗರು ದೊಡ್ಡ ಬೆಲೆ ಮೂಲದವರು ಎನ್ನಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಕಗ್ಗಲಿಪುರ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಮೃತ ದೇಹಗಳನ್ನ ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆಂದು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.