
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 21 ವರ್ಷದ ಯುವತಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತಳನ್ನು ಮೋನಿಷಾ (21) ಎಂದು ಗುರುತಿಸಲಾಗಿದೆ.
ಉದ್ಯೋಗ ಅರಸಿ ಜಾಬ್ ಇಂಟರ್ವ್ಯೂಗೆ ತೆರಳುತ್ತಿದ್ದ ಮೋನಿಷಾ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ನರಸಾಪುರ ಕೈಗಾರಿಕಾ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತದ ವೇಳೆ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.