ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಕ್ಷಯ ರೋಗ ಹಾಗೂ ಹೆಚ್.ಐ.ವಿ. ಸೋಂಕಿತ / ಬಾದಿತರ ಸಂಖ್ಯೆಗೆ ಅನುಗುಣವಾಗಿ ಅವರಿಗೆ ಅವಶ್ಯಕವಾಗಿ ಬೇಕಾಗಿರುವ ಸಾಮಾಜಿಕ ಸವಲತ್ತುಗಳು ಮತ್ತು ಬೇಡಿಕೆಗಳ ಪಟ್ಟಿಯನ್ನು ಸಿದ್ದಪಡಿಸಿ ಸಂಬಂದಪಟ್ಟ ಇಲಾಖೆಗಳಿಗೆ ಸಲ್ಲಿಸಿ. ಬಾದಿತರಿಗೆ ಸರ್ಕಾರದಿಂದ ಸಿಗುವ ಅಗತ್ಯ ಸಾಮಾಜಿಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಮಾಜದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಬಾದಿತರಿಗೆ ಸಹಕಾರಿಯಾಗುತ್ತದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ 485 ಕ್ಷಯರೋಗಿಗಳು ಉಚಿತವಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕ್ಷಯ ರೋಗಿಗಳಿಗೆ ಚಿಕಿತ್ಸೆ ಜತೆಗೆ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರದ ಅವಶ್ಯಕತೆ ಇದ್ದು, ಪೌಷ್ಠಿಕ ಆಹಾರ ವಿತರಿಸಲು ಸ್ವಯಂ ಪ್ರೇರಿತವಾಗಿ ಕೈಗಾರಿಕೆಗಳ ಮುಖ್ಯಸ್ಥರು, ಸಂಘ-ಸಂಸ್ಥೆಗಳ ದಾನಿಗಳು ಮುಂದೆ ಬರಬೇಕಿದೆ ಎಂದರು.

ಜಿಲ್ಲೆಯಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ 100 ದಿನಗಳ ವಿಶೇಷ ಆಂದೋಲನವನ್ನು ಹಮ್ಮಿಕೊಂಡಿದ್ದು ನಿರ್ದಿಷ್ಟ ಪ್ರದೇಶಗಳ ಜನರನ್ನು ತಪಾಸಣೆಗೆ ಒಳಪಡಿಸಿ, ಕ್ಷೇತ್ರ ಕ್ಷಯರೋಗ ಪತ್ತೆಹಚ್ಚಲು ಕ್ರಮ ವಹಿಸಲಾಗುತ್ತಿದೆ. 40 ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತ ಮಾಡಲು ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು 30ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ ಎಂದರು.

ಇದೇ ಸಂದರ್ಭದಲ್ಲಿ ನಡೆದ ನಮ್ಮ ಕ್ಲಿನಿಕ್ ಗಳ ಕುಂದು ಕೊರತೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ 10 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು. ಸಣ್ಣ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರೋಗ್ಯ ಕಾಪಾಡಲು ಸಹಾಯವಾಗುತ್ತಿವೆ. ಸಾರ್ವಜನಿಕರು ನಮ್ಮ ಕ್ಲಿನಿಕ್ ನಲ್ಲಿ ದೊರೆಯುವ ಆರೋಗ್ಯ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ್ ಎಂ.ಸಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *