ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಸ್ತರಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ದೊಡ್ಡಬಳ್ಳಾಪುರ ಪ್ರಖಂಡದ ಶ್ರೀ ಸ್ವಾಮಿ ವಿವೇಕಾನಂದ ಘಟಕದ ವತಿಯಿಂದ 7ನೇ ವರ್ಷದ ಗೌರಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.

ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಯುವಕರು ಹಾಗೂ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡಿದ್ದು, ಬೆಸ್ತರಪೇಟೆಯಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.
ಗಣೇಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಪರಿಸರ ಸ್ನೇಹಿ ಹಾಗೂ ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
