ಗೋವು ಭಾರತೀಯರಿಗೆ ತಾಯಿ ಸಮಾನ-ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ-ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯ- ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು- ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *