ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದು, ನುಡಿದಂತೆ ನಡೆದಿದ್ದೇವೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನ ಹಳೇ ಬಸ್ ನಿಲ್ದಾಣದ ಬಳಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕುಟುಂಬಗಳು ಅಭಿವೃದ್ಧಿ ಕಾಣಬೇಕು ಎಂಬ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರಕಬೇಕು. ಅರ್ಹ ಫಲಾನುಭವಿಗಳು ಯಾರು ಕೂಡ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು, ಯೋಜನೆಗಳ ಸೌಲಭ್ಯ ಸಿಗದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಿ, ಯೋಜನೆಗಳನ್ನು ತಲುಪಿಸಲು ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದ್ದು ಎಲ್ಲರೂ ನೋಂದಾಯಿಸಿಕೊಳ್ಳಲು ಕ್ರಮ ವಹಿಸಬೇಕು, ಮುಂದಿನ ದಿನಗಳಲ್ಲಿ ಹಲವು ಯೋಜನೆಗಳು ಜಾರಿಗೆ ತರುತ್ತೇವೆ ಎಂದು ಸಚಿವರು ಹೇಳಿದರು.
ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳಡಿ ದೇವನಹಳ್ಳಿ ತಾಲ್ಲೂಕಿನಲ್ಲಿ 82 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದು ಸಚಿವರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸಮಾವೇಶದಲ್ಲಿ ಬೆಂಗಳೂರು ಗ್ರಾಮಾಂತರ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.