ಘಾಟಿಯಲ್ಲಿ ಶಾಸ್ತ್ರೋಕ್ತ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿರಿಸಿದ 66 ಜೋಡಿಗಳು

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಇಂದು (ಮೇ.7) ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆಯಿತು.

ಈಗಾಗಲೇ ನೋಂದಾಯಿಸಿಕೊಂಡಿರುವ ಒಟ್ಟು 66 ಜೋಡಿಗಳು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಸಲ್ಲುವ ಶುಭಕಟಕ ಲಗ್ನದಲ್ಲಿ ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗಿತ್ತು.

ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗಿತ್ತು.

ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪ್ರಾಧಿಕಾರದ ಸದಸ್ಯರು‌ ಸೇರಿದಂತೆ ‌ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *