
ದೊಡ್ಡಬಳ್ಳಾಪುರ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ, ಆರೋಗ್ಯ ಹಾಗೂ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.
ಬಳಿಕ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಉತ್ತಮ ಮೂಲಸೌಕರ್ಯ, ಸುಗಮ ದರ್ಶನ ವ್ಯವಸ್ಥೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧಾ, ಜಿಲ್ಲಾ ಪಂಚಾಯಿತಿ ಸಿಇಒ ವಾಸಂತಿ ಅಮರ್, ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜ್, ಆರ್.ವಿ ಮಹೇಶ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಸದಸ್ಯ ಎಸ್ ಡಿ ಮುನಿರಾಜ್, ಬಗರ್ ಹುಕುಂ ಕಮಿಟಿ ಸದಸ್ಯ ಗಂಗಸಂದ್ರ ಶ್ರೀಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.