ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್

ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ  ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ವೈದ್ಯಾಧಿಕಾರಿಗಳು ಸಕ್ರಿಯವಾಗಿರಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಲು ಬೆಸ್ಕಾಂ ಸಿಬ್ಬಂದಿಗೆ ತಿಳಿಸಿದರು.

ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗದಂತೆ ಎಚ್ಚರ ವಹಿಸಿ ಎಂದರು. ವಾಹನ ದಟ್ಟಣೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಬಸ್ ಗಳ ವ್ಯವಸ್ಥೆ, ಪೊಲೀಸ್ ಸಿಬ್ಬಂದಿಯನ್ನ ನೇಮಿಸಲು ತಿಳಿಸಿದರು.

ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿ, ಸ್ವಚ್ಛತೆ ಕಾಪಾಡಲು ತಿಳಿಸಿದರು.  ಸ್ವಸಹಾಯ ಗುಂಪುಗಳ  ಮಳಿಗೆಗಳಿಗೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಧಾರ್ಮಿಕ ದತ್ತಿ  ತಹಸೀಲ್ದಾರ್ ಜಿ ಜೆ ಹೇಮಾವತಿ,  ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *