ಚನ್ನರಾಯಪಟ್ಟಣ ರೈತರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ: ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರು ಮನವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದವರ ಜೊತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಚರ್ಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು;
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರು ಮನವಿ ಮಾಡಿದ್ದಾರೆ ಎಂದರು.

430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ. ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!