
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಶನಿವಾರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಎಸಿ ಗೋವಿಂದಪ್ಪ ಮಾತ್ರ ನಾಮಪತ್ರ ಸಲ್ಲಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಕೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ನೂತನವಾಗಿ ಆಯ್ಕೆಯಾದ ಎಸಿ ಗೋವಿಂದಪ್ಪ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತ ಸಾಲ ಸೌಲಭ್ಯಗಳು ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರುಗಳ ಸಲಹೆ ಮೇರೆಗೆ ಸೇವೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಸದಸ್ಯರು ಅಭಿನಂದಿಸಿದರು.