
ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ ಘಟನೆ ಇಂದು (ಬುಧವಾರ) ಮುಂಜಾನೆ ನಡೆದಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಶವ ಪತ್ತೆಯಾಗಿದೆ. ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ಘಟನೆ ಜರುಗಿದೆ.
ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಎಂಬವರು ಚಿರತೆ ದಾಳಿಗೆ ಮೃತಪಟ್ಟಿರುವ ಪಾದಯಾತ್ರಿ. ಮಲೆಮಹದೇಶ್ವರ ಬೆಟ್ಟಕ್ಕೆ ಮಂಡ್ಯ ಚಿರನಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಜನರು ಪಾದಯಾತ್ರೆ ತೆರಳಿದ್ದರು. ಮಂಗಳವಾರ ರಾತ್ರಿ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ, ಬುಧವಾರ ಬೆಳಗ್ಗೆ ಅಲ್ಲಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದರು.
ಈ ಸಂದರ್ಭದಲ್ಲಿ, ಬುಧವಾರ ಬೆಳಗ್ಗೆ ರಂಗಸ್ವಾಮಿ ಒಡ್ಡಿನ ಸಮೀಪದ ಪಾದಯಾತ್ರಿಕರ ಮಾರ್ಗದಲ್ಲಿ ಕುಳಿತಿದ್ದ ಚಿರತೆಯು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿ ಎಳೆದೊಯ್ದಿದೆ. ಜೊತೆಯಲ್ಲಿದ್ದ ಐವರು ಸ್ನೇಹಿತರು ಕಿರುಚಾಡಿಕೊಂಡು ಚಿರತೆ ಓಡಿಸಲು ಎಷ್ಟೇ ಪ್ರಯತ್ನಪಟ್ಟರೂ ಪ್ರವೀಣ್ನನ್ನು ಅರಣ್ಯದೊಳಗೆ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ.
ಭಯಭೀತರಾದ ಸ್ನೇಹಿತರು ಮಲೆಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಪತ್ತೆ ಹಚ್ಚಿದ್ದಾರೆ.