ಜನ, ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು, ದನಕರುಗಳಿಗೆ ಮೇವು ಪೂರೈಕೆಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ

ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪನವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರವು ಘೋಷಣೆ ಮಾಡಿದ್ದು, ಪ್ರತಿ 15 ದಿನಕ್ಕೊಮ್ಮೆ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಬರ ನಿರ್ವಹಣೆಯ ಕುರಿತು ಸಭೆ ನಡೆಸಿ ವರದಿ ನೀಡಿ, ಬರದ ತೀವ್ರತೆ ಪರಿಗಣಿಸಿ ನೀರು ಮತ್ತು ಆಹಾರವನ್ನು ಪೂರೈಸಿ. ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಟ್ಯಾಂಕರ್ ನೀರು ಪೂರೈಸಿ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಅಂತರ್ಜಲ ಮಟ್ಟವು ಈ ವರ್ಷ ಕುಸಿದಿದೆ. ಜಲಜೀವನ್ ಮಿಷನ್ ಕಾಮಗಾರಿಗಳು ವಿಳಂಬ ವಾಗುತ್ತಿದ್ದು ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.

ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲವು ಸ್ಥಳಗಳಲ್ಲಿ ನಿರ್ವಹಣೆ ಇಲ್ಲದೆ ದುಸ್ಥಿತಿಯಲ್ಲಿ ಇದೆ. ಒಂದು ತಿಂಗಳ ಗಡುವಿನೊಳಗೆ ಜಿಲ್ಲೆಯ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ನಿರ್ವಹಣೆಯೊಂದಿಗೆ ಕಾರ್ಯನಿರ್ವಹಿಸಲು ಕ್ರಮವಹಿಸಿ ವರದಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 46003.44 ಹೆಕ್ಟೇರ್ ನಷ್ಟು ರಾಗಿ, 3477.68 ಹೆಕ್ಟೇರ್ ಮೆಕ್ಕೆಜೋಳ ಹಾಗೂ ಇತರೆ ಬೆಳೆಗಳು ಸೇರಿದಂತೆ ಒಟ್ಟು 49,559.57 ಹೆಕ್ಟೇರ್ ನಷ್ಟು ಬರಗಾಲದಿಂದ ಹಾನಿಯಾಗಿದೆ. ಪ್ರಸ್ತುತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರದಿಂದ 6 ಕೋಟಿ ಬರ ಪರಿಹಾರಕ್ಕಾಗಿ ಹಣ ಬಿಡುಗಡೆ ಆಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಮೊದಲ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್, ಅವರು ಸಚಿವರಿಗೆ ಮಾಹಿತಿ ನೀಡಿದರು.

ಸಭೆಗೂ ಮುನ್ನ ಸಚಿವರ ಅಧ್ಯಕ್ಷತೆಯಲ್ಲಿ,  ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಕ್ಷೇತ್ರ ವೀಕ್ಷಣೆಯನ್ನು ನಡೆಸಲಾಯಿತು. ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಅರಸನಹಳ್ಳಿ, ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಾಲೇಪುರ, ಕುಂದಾಣ ಹೋಬಳಿಯ ಶೆಟ್ಟೇರಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಶಿವಪುರದಲ್ಲಿ ಬರಪರಿಸ್ಥಿತಿಯ ಕ್ಷೇತ್ರ ವೀಕ್ಷಣೆ ನಡೆಸಿ ಮಳೆಯ ಅಭಾವದಿಂದ ರೈತರು ಬೆಳೆದ ಬೆಳೆಗಳು ಸರಿಯಾದ ಇಳುವರಿ ಇಲ್ಲದಿರುವುದನ್ನು ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *