ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ನಡುವೆ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ  ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಸಾರ್ವಜನಿಕ ಸಂಪರ್ಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ ಸಾರ್ವಜನಿಕ ಸಂಪರ್ಕ ಸಭೆಗಳನ್ನು ನಡೆಸಲಾಗುವುದು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಾರಕ್ಕೊಮ್ಮೆ  ತಾಲ್ಲೂಕುಗಳಿಗೆ ಭೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಬೇಕು, ಸರ್ಕಾರಿ ಯೋಜನೆಗಳಿಂದ ಜನರಿಗೆ ಆಗುತ್ತಿರುವ ಲಾಭ, ನಷ್ಟಗಳ ಬಗ್ಗೆ ವಿಚಾರಿಸಿ, ಸರ್ಕಾರಿ ಕಾಮಗಾರಿಗಳನ್ನು ಪರಿಶೀಲಿಸಬೇಕು. ಸಂಪೂರ್ಣ ಕಾಮಗಾರಿ ಮುಗಿಯುವವರೆಗೂ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬಾರದು. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡಿದಾಗ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಸಂವೇದನಾಶೀಲ ಗುಣ ಅಧಿಕಾರಿಗಳಲ್ಲಿರಬೇಕು ಎಂದರು.

ಬಡವರಿಗೆ ನಿವೇಶನ ಹಂಚಿಕೆ,  ಹಳ್ಳಿಗಳಲ್ಲಿ ರಸ್ತೆ ದುರಸ್ತಿ, ಸ್ಮಶಾನ ಭೂಮಿ ಕೋರಿಕೆ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಶೀಘ್ರ ಇತ್ಯರ್ಥ ಪಡಿಸಿ ಎಂದು ಹೇಳಿದರು.

270 ಅರ್ಜಿ ಸ್ವೀಕಾರ

ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಜಮೀನು ಸರ್ವೆ,  ಸ್ಮಶಾನ ಜಾಗ ಹಾಗೂ ರಸ್ತೆ ಅವ್ಯವಸ್ಥೆ, ರೈಲ್ವೇ ಕಾಮಗಾರಿಗಳ ವಿಳಂಬ, ಗೋಮಾಳ ಒತ್ತುವರಿ, ಹಕ್ಕು ಪತ್ರ ಹಂಚಿಕೆ, ಕೆರೆ ಕಟ್ಟೆ ಸಂರಕ್ಷಣೆ, ಪಡಿತರ ಚೀಟಿ ಹಂಚಿಕೆ,  ನಿವೇಶನ ಹಂಚಿಕೆ, ಚರಂಡಿ ನಿರ್ಮಾಣ, ಪೊಲೀಸ್ ಇಲಾಖೆ ಪ್ರಕರಣಗಳ ಮರು ಪರಿಶೀಲನೆ, ಕುಡಿಯುವ ನೀರು ಶೌಚಾಲಯ ಸೇರಿದಂತೆ ಮೂಲಭೂತ ಸಮಸ್ಯೆಗಳು, ಕೃಷಿ‌(ಸಬ್ಸಿಡಿ)ಯಂತ್ರೋಪಕರಣಗಳ ವಿತರಣೆ, ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ವಿಳಂಬ ಮಾಡುತ್ತಿರುವುದು ಸೇರಿದಂತೆ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ವ್ಯಾಪ್ತಿಗೆ ಬರುವ 270 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ.ಕೆ.ಎನ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಹಾಲಿ ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *