ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ಮನೆ ಮನೆಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದ್ದು, ವಿಳಂಬ ಮಾಡದೇ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಅವರು 1192 ಪ್ರದೇಶಗಳಲ್ಲಿ ಕಾಮಗಾರಿ ಕೈಗೊಂಡಿದ್ದು, ಕೆಲವು ಪ್ರದೇಶಗಳಲ್ಲಿ ಒವರ್ ಹೆಡ್ ಟ್ಯಾಂಕ್ ನಿರ್ಮಿಸಲು, ಕೊಳವೆ ಬಾವಿ ಕೊರೆಸಲು ವಿಳಂಬವಾಗಿದೆ. ಹೀಗಾಗಿ ಕಾಮಗಾರಿ ಪ್ರಗತಿ ವಿಳಂಬವಾಗುತ್ತಿದ್ದು, ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಗುರುತಿಸಿರುವ ಜಾಗಗಳಲ್ಲಿ ಕೆಲವು ಕಡೆ ಕಾಮಗಾರಿ ಪ್ರಗತಿಯಲ್ಲಿದ್ದು, ದೇವನಹಳ್ಳಿ ಹಾಗೂ ವಿಜಯಪುರ ಟೌನ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಜಾಗ ಗುರ್ತಿಸಲ್ಪಟ್ಟಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಅನ್ನ ಭಾಗ್ಯ ಯೋಜನೆ ಅಡಿ 231009 ಫಲಾನುಭವಿಗಳಿದ್ದು ಅದರಲ್ಲಿ 170329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು ಜುಲೈ ಮಾಹೆಯಲ್ಲಿ ಜಮೆಯಾಗಿದೆ. ಆಗಸ್ಟ್ ತಿಂಗಳ ಹಣ ಸಂದಾಯ ಪ್ರಗತಿಯಲ್ಲಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ನಮ್ಮ ಕ್ಲಿನಿಕ್ ಕಟ್ಟಡ ನಿರ್ಮಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಆಯುಷ್ಮಾನ್ ಕಾರ್ಡ್ ಗಳನ್ನು ಕುಟುಂಬದ ಪ್ರತಿಯೊಬ್ಬರು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪಶು ವೈದ್ಯಕೀಯ ಆಸ್ಪತ್ರೆ, ಹಾಸ್ಟೆಲ್, ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *