ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ- ಸಿಎಂ ಸಿದ್ದರಾಮಯ್ಯ

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದು ಹೇಳಿದರು.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು ತಿಳಿಸಿದರು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದರು.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಹೇಳಿದ್ದಾರೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

2 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

3 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

6 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

7 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago