ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ರವರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೇರಾ ಮಟ್ಟಿ ಮೇರಾ ದೇಶ್ ಕಾರ್ಯಕ್ರಮ, ನರೇಗಾ ಯೋಜನೆ, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆ, ಸಂಜೀವಿನಿ, ಗೃಹಲಕ್ಷ್ಮಿ ಯೋಜನೆ ಹಾಗೂ ಇತರೆ ಪಂಚಾಯತ್ ರಾಜ್ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಮೇರಾ ಮಟ್ಟಿ ಮೇರಾ ದೇಶ್ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ವೀರಯೋಧರಿಗೆ ಗೌರವ ಸಲ್ಲಿಸಲು ಅಮೃತ ಸರೋವರ ಅಥವಾ ಗ್ರಾಮ ಪಂಚಾಯಿತಿ ಹತ್ತಿರ ಶಿಲಾಫಲಕ ನಿರ್ಮಾಣ ಮಾಡಿ ವಿಶೇಷ ಚಟುವಟಿಕೆಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಮಾತನಾಡಿ, ಮೇರಾ ಮಟ್ಟಿ ಮೇರಾ ದೇಶ್ ಕಾರ್ಯಕ್ರಮದ ಭಾಗವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ 75 ವಿವಿಧ ಬಗೆಯ ಸಸಿಗಳನ್ನು ನೆಡಲು ಪಿಡಿಒಗಳಿಗೆ ತಿಳಿಸಿದರು.
ಈ ವೇಳೆ ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ, ಸಹಾಯಕ ನಿರ್ದೇಶಕರು (ಪಂ.ರಾ) ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ನರೇಗಾ ಸಿಬ್ಬಂದಿ ಹಾಗೂ ತಾ.ಪಂ. ಸಿಬ್ಬಂದಿ ಹಾಜರಿದ್ದರು.