ಜು. 5 ಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ- ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯು 14 ಅಡಿ ಎತ್ತರ ಇದ್ದು ಅಂದಾಜು 1.35 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗಿದೆ. ಪ್ರತಿಮೆ ಅನಾವರಣ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆ, ಅದನ್ನು ಸಾಕಾರಗೊಳಿಸುವ ಕಾಲ ಕೂಡಿಬಂದಿದ್ದು ಜುಲೈ 05 ಭಾನುವಾರ ರಂದು ಉದ್ಘಾಟನೆ ಆಗಲಿದೆ ಎಂದರು.

ಜುಲೈ 05 ರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು ರಾಜ್ಯ ಸಭೆ ವಿರೋಧ ಪಕ್ಷದ ನಾಯಕರು ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲಿದ್ದಾರೆ.

ವೇದಿಕೆ ಕಾರ್ಯಕ್ರಮವು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರುದುದ್ದನಹಳ್ಳಿ ಬಳಿಯ ಶಿಕ್ಷಕರ ಬಡಾವಣೆಯಲ್ಲಿ ಜರುಗಲಿದ್ದು ಸಮಾರಂಭದ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರ ಅಮೃತ ಹಸ್ತದಿಂದ ನೆರವೇರಿಸಲಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೇರಿದಂತೆ ರಾಜ್ಯದ ಸಂಸದರು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರುಗಳು, ಚುನಾಯಿತ ಜನಪ್ರತಿನಿದಿಗಳು, ಎಲ್ಲಾ ನಾಮನಿರ್ದೇಶಿತ ಸದಸ್ಯರುಗಳು, ಎಲ್ಲಾ ನಿಗಮ/ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರುಗಳು, ಎಲ್ಲಾ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು.

*ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ಪಲ್ಲಕ್ಕಿ*
ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಒಳಗೊಂಡ 102 ಗ್ರಾಮ ಪಂಚಾಯಿತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರ ಇರುವ ಪಲ್ಲಕ್ಕಿಯೊಂದಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿದ್ದು ಸಮಾರಂಭವನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕನ್ನಡಪರ, ದಲಿತಪರ, ಪ್ರಗತಿ ಪರ ಸಂಘಟನೆಗಳ ಮುಖಂಡರು, ವಿವಿಧ ಪಕ್ಷಗಳ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವೀಗೊಳಿಸಬೇಕೆಂದು ಸಚಿವರು ಮನವಿ ಮಾಡಿದರು.

ನಂತರ ಅಧಿಕಾರಿಗಳೊಂದಿಗೆ ಸಚಿವರು ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧತೆ, ಆಹ್ವಾನ ಪತ್ರಿಕೆ ಮುದ್ರಣ, ಗಣ್ಯರಿಗೆ ಆಹ್ವಾನ, ಜನರ ಕರೆತರುವಿಕೆ, ವಾಹನಗಳ ಪಾರ್ಕಿಂಗ್, ಭದ್ರತೆ, ಕುಡಿಯುವ ನೀರು-ಉಪಹಾರ ಹಾಗೂ ಇನ್ನಿತರ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಮೇಲುಸ್ತುವಾರಿ ವಹಿಸಲು ಡಿಸಿ,ಸಿಇಒಗೆ ಸೂಚಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಸಿಇಒ ಡಾ ವಾಸಂತಿ ಅಮರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ಶಾಂತ್ ಕುಮಾರ್ ಸೇರಿದಂತೆ, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!