ಜೂ.12ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ”ಯನ್ನು 2023ರ ಜೂನ್ 12 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಮತ್ತು ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023ರ ಜೂನ್ 12 ರಂದು ಬೆಳಿಗ್ಗೆ 9:30 ಗಂಟೆಗೆ ದೇವನಹಳ್ಳಿ ಟೌನ್‌ನ ತಾಲ್ಲೂಕು ಕಛೇರಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಭವನದವರೆಗೆ ಶಾಲಾ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಂತರ ಬೆಳಿಗ್ಗೆ 11.00 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮತಿತ್ತರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಯಾವುದೇ ರೀತಿಯ ಅಡೆತಡೆಗಳು ಉಂಟಾಗದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ವಿಶೇಷ ತರಬೇತಿ ಕೇಂದ್ರದಲ್ಲಿ ವ್ಯಾಸಂಗ ಮಾಡಿ ನಂತರ ಮುಖ್ಯವಾಹಿನಿ ಶಾಲೆಯಲ್ಲಿ ದಾಖಲಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 70ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯಲ್ಲಿ ಕಂಡುಬಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಕ್ಕಳಿಗೆ ಎಸ್.ಸಿ ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಶೈಕ್ಷಣಿಕ ಸಾಮಗ್ರಿಗಳನ್ನು ಮತ್ತು ಅವರ ಕುಟುಂಬ ವರ್ಗದವರಿಗೆ ಆಹಾರ ಕಿಟ್‌ಗಳನ್ನು ನೀಡಲಾಗುವುದು. ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಪ್ರೌಢ ಶಾಲೆಗಳಲ್ಲಿ ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆ ಬಗ್ಗೆ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ತಾಲ್ಲೂಕುವಾರು ಪ್ರಥಮ, ದ್ವಿತೀಯ ಮತ್ತು ತೃತೀಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದರು.

Leave a Reply

Your email address will not be published. Required fields are marked *