‘ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ’-ಮಾಜಿ‌‌ ಸಿಎಂ‌ ಹೆಚ್ ಡಿಕೆ

ರಾಜ್ಯ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಎಂದು‌ ಮಾಜಿ‌ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ…ಇದು ಸತ್ಯ ಎಂದಿದ್ದಾರೆ.

ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ಕಿಡಿಕಾರಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ಎಂದು ಹೇಳಿದ್ದಾರೆ.

ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ ಎಂದಿದ್ದಾರೆ.

ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ ಎಂದಿದ್ದಾರೆ.

ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ  ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಎಂದು ಪ್ರಶ್ನೆ‌‌‌ ಮಾಡಿದ್ದಾರೆ.

ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago