ಬಾಲ್ಯ ವಿವಾಹ ತಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು- ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ 2005-2006, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆ ಸೇರಿದಂತೆ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಜಿಲ್ಲೆಯಲ್ಲಿ 2024ರ ಏಪ್ರಿಲ್ ಮಾಹೆಯಿಂದ ಆಗಸ್ಟ್ ಮಾಹೆಯವರೆಗೆ ಒಟ್ಟು-16 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ 06, ದೊಡ್ಡಬಳ್ಳಾಪುರ 09, ಹೊಸಕೋಟೆಯಲ್ಲಿ 01 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ. ಜಿಲ್ಲೆಯ ಪ್ರತಿ ಮನೆಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಾನೂನುಗಳ ಕರಪತ್ರವನ್ನು ಹಂಚುವ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದರು.

*ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಪೊಲೀಸ್‌ ಠಾಣೆ ಅವರ ಗಮನಕ್ಕೆ ತುರ್ತಾಗಿ ತರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದರು*

ಜಿಲ್ಲೆಯಲ್ಲಿ ಒಟ್ಟು 1277 ಅಂಗನವಾಡಿ ಕೇಂದ್ರಗಳಿದ್ದು, 999 ಸ್ವಂತ ಅಂಗನವಾಡಿ ಕಟ್ಟಡಗಳು, 04 ಪಂಚಾಯಿತಿ ಕಟ್ಟಡಗಳಲ್ಲಿ, 50 ಅಂಗನವಾಡಿಗಳು ಸಮುದಾಯ ಭವನದಲ್ಲಿ, 88 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 132 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಿ ಸಿ.ಎಸ್.ಆರ್ ಅನುದಾನದಡಿ ಅಂಗನವಾಡಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ವಿದ್ಯುತ್, ನೀರು ಸೇರಿದಂತೆ ಮೂಲ ಸೌಕರ್ಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಿ ಎಂದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದರಲ್ಲದೆ ಐ.ಸಿ.ಡಿ.ಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ರಡಿ ನಿಯಮ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯ ಅಡಿ ದಾಖಲಾದ 94 ಪ್ರಕರಣಗಳಲ್ಲಿ 83 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 17 ಪ್ರಕರಣಗಳಲ್ಲಿ 11 ಪ್ರಕರಣಗಳನ್ನು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಪ್ರಾಧಿಕಾರ ಸದಸ್ಯರಾದ ನ್ಯಾಯಮೂರ್ತಿ ಬೋಲಾ ಪಂಡಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಅನೀತಾಲಕ್ಷ್ಮೀ, ಹೊಸಕೋಟೆ ವಿಭಾಗದ ಡಿವೈಎಸ್ಪಿ ಶಂಕಗೌಡ ಅಣ್ಣಾ ಸಾಹೇಬ್ ಪಾಟೀಲ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

9 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

11 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

17 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

19 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

1 day ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

1 day ago