ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆ ಪ್ರಕಟ

ದೊಡ್ಡಬಳ್ಳಾಪುರ: ಮುಂದಿನ ಐದು ವರ್ಷಗಳ ಅವಧಿಗೆ ನಡೆಯಲಿರುವ ತಾಲ್ಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯ ತಾಲ್ಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 123 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಸ್ಥಾನಗಳನ್ನು ಆವರ್ತನೆಯ ಮೇಲೆ ಮೀಸಲಿಡುವ) ನಿಯಮಗಳು, 2023ರ ನಿಯಮ 6ರ ಅನ್ವಯ ಈ ಮೀಸಲಾತಿ ನಿಗದಿಪಡಿಸಲಾಗಿದೆ.

ಈ ಹಿಂದೆ ರಾಜ್ಯ ಸರ್ಕಾರವು ಅಕ್ಟೋಬರ್ 9, 2026ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಮೀಸಲಾತಿಯ ಕರಡು ಅಧಿಸೂಚನೆಯನ್ನು ಪ್ರಕಟಿಸಿತ್ತು. ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು ರಾಜ್ಯಪತ್ರ ಪ್ರಕಟವಾದ ದಿನಾಂಕದಿಂದ 10 ದಿನಗಳ ಕಾಲಾವಕಾಶ ನೀಡಲಾಗಿತ್ತು.

ಈ ಅವಧಿಯಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಿ ವಿಲೇವಾರಿ ಮಾಡಿದ ಬಳಿಕ ಇದೀಗ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳ ಚುನಾವಣಾ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ.

Leave a Reply

Your email address will not be published. Required fields are marked *

error: Content is protected !!