ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ ತಿರುಮಗೊಂಡನಹಳ್ಳಿ ಬಳಿ ರೈಲ್ವೆ ಗೇಟ್ ಇದ್ದು, ಮೇಲ್ಸೇತುವೆ ನಿರ್ಮಿಸಲು ಜನರು ಒತ್ತಾಯಿಸಿದ್ದರು. ಈ ಹಿನ್ನೆಲೆ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ನೇತೃತ್ವದಲ್ಲಿ ಸರ್ಕಾರದಿಂದ ಅನುಮೋದನೆಗೊಂಡಿದೆ. ಅತೀ ಶೀಘ್ರದಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭಕ್ತಾಧಿಗಳು ಬಂದು ಹೋಗುತ್ತಿರುತ್ತಾರೆ. ರೈಲ್ವೆ ಗೇಟ್ ಹಾಕಿದರೆ ಭಕ್ತಾಧಿಗಳು ಹಾಗೂ ಸುಮಾರು 25ಹಳ್ಳಿಗಳ ಜನರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ವಾಹನ ದಟ್ಟಣೆ ಹೆಚ್ಚಾಗುತ್ತಿತ್ತು. ಜನರ ಉಪಯೋಗಕ್ಕಾಗಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
“ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ”
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ ರಾಜಕಾರಣದಲ್ಲಿ ಯಾರಿಗೂ ನೋವುಂಟು ಮಾಡದೇ, ಯಾರನ್ನೂ ಕಡೆಗಣಿಸದೇ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡುವುದಿಲ್ಲ. ಕಡೆಗಣನೆ ಮಾಡಿರುವ ಇತಿಹಾಸವಿಲ್ಲ ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಚುನಾಯಿತ ಸದಸ್ಯರನ್ನು ಆಹ್ವಾನಿಸದೇ ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಹಿರಿಯ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಕುಳಿತು ಮಾತಾಡಿ ಬಗೆಹರಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಾಗುವುದು ಎಂದು ತಿಳಿಸಿದರು.
ನಾವು ಯುವಕರು. ಕಾಂಗ್ರೆಸ್ ಸಿದ್ಧಾಂತ ಹಾಗೂ ಹಿರಿಯರಾದ ಕೆ.ಎಚ್ ಮುನಿಯಪ್ಪನವರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ. ಸಚಿವರು ಎಲ್ಲರನ್ನು ಒಗ್ಗೂಡಿಸಿಕೊಂಡು ರಾಜಕಾರಣ ಮಾಡುತ್ತಾರೆ. ಸಚಿವರಲ್ಲಿ ಮೇಲು ಕೀಳು ಎಂಬ ಮನೋಭಾವನೆ ಇಲ್ಲ. ಯಾರನ್ನೂ ಕಡೆಗಣಿಸುವುದಿಲ್ಲ. ಒಂದು ವೇಳೆ ಸಚಿವರ ಗಮನಕ್ಕೆ ಬಾರದೇ ಯಾವುದಾದರು ಎಡವಟ್ಟು ಆಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.
ಶಿಷ್ಟಚಾರ ಪ್ರಕಾರ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿಲ್ಲ ಎಂಬ ಆರೋಪಗಳು ಸತ್ಯಕ್ಕೆ ದೂರವಾದದ್ದು. ಇದಕ್ಕೆ ಕಾರಣ ಕೆ.ಎಚ್ ಮುನಿಯಪ್ಪನವರು ಅಲ್ಲ. ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಈ ಆರೋಪಗಳು ಕೇಳಿಬಂದಿದೆ. ಸಚಿವರು ಯಾರನ್ನೂ ಕಡೆಗಣಿಸಿಲ್ಲ. ಕಡೆಗಣಿಸುವುದಿಲ್ಲ ಎಂದರು…..