ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ. ವಾಸುದೇವ್ ಹಾಗೂ ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಇಬ್ಬರನ್ನೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಟಿ.ಜಿ. ವಾಸುದೇವ್, ತಮ್ಮ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಸದಸ್ಯರು ಹಾಗೂ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಬಲಪಡಿಸಿ, ಸದಸ್ಯರಿಗೆ ಉತ್ತಮ ಸೇವೆ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ರೈತರೊಂದಿಗೆ ನೇರ ಸಂಪರ್ಕ ಹೊಂದಿರುವ ಸಹಕಾರ ಸಂಘದ ಮೂಲಕ ರೈತರಿಗೆ ಅಗತ್ಯ ಸೇವೆಗಳು ಪರಿಣಾಮಕಾರಿಯಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು. ಸಂಘದ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಪಡೆದು ಪಾರದರ್ಶಕ ಆಡಳಿತ ನಡೆಸಲಾಗುವುದು ಎಂದು ಹೇಳಿದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ರೈತರು ಹಾಗೂ ಮುಖಂಡರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ರಾಜ್ಯ ತೆಂಗು ನಾರು ಮಂಡಳಿ ಮಾಜಿ ಅಧ್ಯಕ್ಷ ವೆಂಕಟೇಶ್ ಬಾಬು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು, ಸುರೇಶ್ ಬಾಬು, ವಕೀಲ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರತಾಪ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಟಿಎಪಿಎಂಸಿ ನಿರ್ದೇಶಕ ಪುರುಷೋತ್ತಮ್, ಮುಖಂಡರಾದ ಧನಂಜಯ್, ಮಂಜುನಾಥ, ಮುನೇಗೌಡ, ಅಶೋಕ್, ಹರೀಶ್, ಗಂಗಾಧರ, ಕನಕದಾಸ ಯುವ ಮುಖಂಡ ಉದಯ ಆರಾಧ್ಯ, ಮುರುಳಿ ಸೇರಿದಂತೆ ನೂತನ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
