2023-24 ನೇ ಸಾಲಿನ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 21 ರಂದು ಜಿಲ್ಲೆಯಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ 2023-24ನೇ ಸಾಲಿನ ತಾಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಏಕ ಕಾಲದಲ್ಲಿ ಸೆಪ್ಟೆಂಬರ್ 21 ರಂದು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ, ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ಕ್ರೀಡಾ ಪಟುಗಳು ಹೆಚ್ಚು ಭಾಗವಹಿಸಲು ಕ್ರಮವಹಿಸಿ ಎಂದರು.
ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಸೇವೆ ಸೇರಿದಂತೆ ತಾಲ್ಲೂಕು ಮಟ್ಟದಲ್ಲಿ ಎಸಿ, ತಹಶೀಲ್ದಾರ್,ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಹಾಗೂ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಎಂದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಟಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು, ದೈಹಿಕ ಶಿಕ್ಷಣ ಅಧಿಕಾರಿಗಳು ಉಪಸ್ಥಿತರಿದ್ದರು.