ದೆಹಲಿಯಲ್ಲಿ ಬರೋಬ್ಬರಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ದೆಹಲಿ ವಿಧಾನಸಭೆಗೆ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರು ದೆಹಲಿಯ 9ನೇ ಹಾಗೂ ನಾಲ್ಕನೇ ಮಹಿಳಾ ಸಿಎಂ ಆಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.
ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರೇಖಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
1974ರಲ್ಲಿ ಹರಿಯಾಣದ ಜಿಂದ್ ಜಿಲ್ಲೆಯ ನಂದಗಢದಲ್ಲಿ ರೇಖಾ ಗುಪ್ತಾ ಅವರು ಜನಿಸಿದ್ದು, ರೇಖಾ ಅವರ ತಂದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬಳಿಕ ರೇಖಾಗೆ ಎರಡು ವರ್ಷವಾದಾಗ ಇವರ ಕುಟುಂಬ ದೆಹಲಿಗೆ ಸ್ಥಳಾಂತರವಾಗಿತ್ತು. ಹೀಗಾಗಿ ದೆಹಲಿಯಲ್ಲೇ ತಮ್ಮ ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣವನ್ನ ಮುಗಿಸಿದ್ದಾರೆ.
ರೇಖಾ ಗುಪ್ತಾ ಅವರು ಫೆಬ್ರವರಿ 5ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಶಾಲಿಮಾರ್ ಬಾಗ್ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆದ್ದಿದ್ದರು. ಎಎಪಿಯ ಬಂದಾನ ಕುಮಾರಿ ಅವರ ವಿರುದ್ಧ 29,595 ಮತಗಳ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದರು.