
ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು, 16 ಮಹಿಳೆಯರು ಸೇರಿದಂತೆ 36 ಮಂದಿ ಸಾವನ್ನಪ್ಪಿದ್ದಾರೆ.
40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರ‍್ಯಾಲಿಯ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸಹಾಯ ಮಾಡಲು ಮತ್ತು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತ್ವರಿತಗೊಳಿಸಲು ಕರೂರ್‌ಗೆ ಧಾವಿಸುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಗ್ಯ ಸಚಿವ ಮಾ. ಸುಬ್ರಮಣಿಯನ್, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಡೇವಿಡ್ಸನ್ ದೇವಾಶಿರ್ವತಮ್ ಮತ್ತು ತಿರುಚಿ ಮತ್ತು ದಿಂಡಿಗಲ್‌ನ ಜಿಲ್ಲಾಧಿಕಾರಿಗಳನ್ನು ನಿಯೋಜಿಸಿದ್ದರು.
ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಸಮಾವೇಶದ ವೇಳೆ ನಡೆದ ಅಹಿತಕರ ಘಟನೆ ತೀವ್ರ ದುಃಖ ತಂದಿದೆ ಎಂದಿದ್ದಾರೆ.

ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಇವೆ. ಈ ಸಂಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿರುವ ದುರಂತದಲ್ಲಿ ಅನೇಕರು ಧಾರುಣ ಸಾವನ್ನಪ್ಪಿ, ಇನ್ನೂ ಅನೇಕರು ತೀವ್ರವಾಗಿ ಗಾಯಗೊಂಡಿರುವ ವಿಷಯ ತಿಳಿದು ತೀವ್ರ ಆಘಾತ ಉಂಟಾಯಿತು.

ಇದು ಅತ್ಯಂತ ದುಃಖಕರ ಘಟನೆ. ಮೃತರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಈ ಪ್ರಾಣ ನಷ್ಟವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಹಾಗೂ ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.