
ದೊಡ್ಡಬಳ್ಳಾಪುರ: 2024ರಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಮತದಾರರನ್ನು ಗುರುತಿಸಿ ಮತ್ತೆ ಪಟ್ಟಿಗೆ ಸೇರ್ಪಡೆಗೊಳಿಸುವ ಉದ್ದೇಶದಿಂದ ಪಕ್ಷದ ವತಿಯಿಂದ 40 ದಿನಗಳ ಕಾಲ ‘ವೋಟ್ ಬಚಾವ್, ದೇಶ್ ಬಚಾವ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸುವ ಜವಾಬ್ದಾರಿಯನ್ನು ಪಕ್ಷ ವಹಿಸಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಶಾಸಕತ್ವದ ಅವಧಿಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿತ್ತು. ವಸತಿ ಯೋಜನೆಯಡಿ ಒಟ್ಟು 32 ಸಾವಿರ ಮನೆಗಳು ಮಂಜೂರಾಗಿದ್ದು, 2019ರಿಂದ 2023ರವರೆಗಿನ ಅವಧಿಯಲ್ಲಿ ಸುಮಾರು 18 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಬಗರ್ ಹುಕುಂ ಯೋಜನೆಯಡಿಯಲ್ಲಿ ಸಾಗುವಳಿ ರೈತರಿಗೆ ಭೂಮಿ ಮಂಜೂರು ಮಾಡುವ ವಿಚಾರವಾಗಿ ತಮ್ಮ ಅವಧಿಯಲ್ಲಿ 20 ಸಭೆಗಳನ್ನು ನಡೆಸಿ ಸುಮಾರು 1,500 ರೈತರಿಗೆ ಜಮೀನು ಮಂಜೂರು ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಾಲಕಾಲಕ್ಕೆ ಸಭೆಗಳನ್ನು ನಡೆಸಲಾಗಿತ್ತು. ಆದರೆ, 2023ರಿಂದ ಈವರೆಗೆ ಕೇವಲ ಬೆರಳೆಣಿಕೆ ಸಭೆಗಳು ಮಾತ್ರ ನಡೆದಿವೆ ಎಂದು ಆರೋಪಿಸಿದರು.
ತಮ್ಮ ಅವಧಿಯಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿತ್ತು. ಆದರೆ, ಇದೀಗ ಆಸ್ಪತ್ರೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸಂಬಂಧಪಟ್ಟವರು ವಿಫಲರಾಗಿದ್ದಾರೆ. ವಾಲ್ಮೀಕಿ ಭವನದ ಕಾಮಗಾರಿ ಪೂರ್ಣಗೊಳಿಸಲು ಬಾಕಿ ಇದ್ದ ಅನುದಾನವನ್ನೂ ಬಿಡುಗಡೆ ಮಾಡಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನಿರಂತರವಾಗಿ ಶ್ರಮಿಸಲಾಗಿತ್ತು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಗ್ಗೆ ವಿರೋಧ ಪಕ್ಷದವರು ಮಾತನಾಡುತ್ತಿಲ್ಲ. ಆದರೆ, ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಿದಾಗ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ತಪ್ಪೇ? ಗ್ಯಾಸ್, ತೈಲ ಬೆಲೆ ಏರಿಕೆಯಾದಾಗ ಶೋಭಾ ಕರಂದ್ಲಾಜೆ ಎಲ್ಲಿದ್ದರು ಎಂದು ಪ್ರಶ್ನಿಸಿದರು.
ರೇಷನ್ ಕಾರ್ಡ್ಗಳು ರದ್ದಾಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ರೂಪಿಸಿರುವ ಮಾನದಂಡಗಳೇ ಕಾರಣ. ದೇಶದಲ್ಲಿ ಬಿಜೆಪಿ ಸರ್ಕಾರದ ಆಡಳಿತದಿಂದ ಅರಾಜಕತೆ ಸೃಷ್ಟಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗುತ್ತಿದ್ದು, ನಾಡು ಸುಭಿಕ್ಷವಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ಬಿಡಬೇಕು ಎಂದು ಆಗ್ರಹಿಸಿದರು.
ಇನ್ನು ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕುಮಾರಸ್ವಾಮಿ ಇನ್ನೂ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಟೀಕಿಸಿದ ಅವರು, ಕೈಗಾರಿಕೆಗಳ ಸಿಎಸ್ಆರ್ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಪ್ರಯತ್ನದಿಂದ ಆಯಾ ರಾಜ್ಯಗಳ ಕೈಗಾರಿಕೆಗಳ ಸಿಎಸ್ಆರ್ ಅನುದಾನವನ್ನು ಆಯಾ ರಾಜ್ಯಗಳಲ್ಲಿಯೇ ವಿನಿಯೋಗಿಸುವಂತಾಗಿದೆ ಎಂದು ಹೇಳಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಮುಖಂಡರಾದ ಅಪ್ಪಿ ವೆಂಕಟೇಶ್, ಟಿ.ಮುನಿರಾಜು, ಆಂಜನಮೂರ್ತಿ, ಜವಾಜಿ ರಾಜೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.