ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡಲು ಗಟ್ಟಿ‌ಧ್ವನಿಯಾಗಿ ನಿಲ್ಲಬೇಕು-ಸಿಎಂ ಸಿದ್ದರಾಮಯ್ಯ

ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಸರ್ವ ಪಕ್ಷಗಳಿಗೆ ಕರೆ ಕೊಟ್ಟಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿ ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ ಎಂದರು.

ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ ಎಂದು ತಿಳಿಸಿದರು.

ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ  CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ.

ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ.

ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು‌ ಹೇಳಿದ್ದಾರೆ.

Leave a Reply

Your email address will not be published. Required fields are marked *