ದೊಡ್ಡಬಳ್ಳಾಪುರ: ಯುವಜನತೆ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ವೃದ್ದಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಚಂದ್ರಪ್ಪ ಅಭಿಪ್ರಾಯಪಟ್ಟರು.
ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಮಂಗಳವಾರ ನಡೆದ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಎನ್‌ಎಸ್‌ಎಸ್ ಇಂದು ಭಾರತದ ಬಹುತೇಕ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಘಟಕಗಳನ್ನು ಹೊಂದಿದ್ದು, ಲಕ್ಷಾಂತರ ಯುವ ಸ್ವಯಂ ಸೇವಕರನ್ನು ಒಳಗೊಂಡಿದೆ. ಜಾಗತಿಕ ಮಟ್ಟದಲ್ಲಿ ಅತಿ ದೊಡ್ಡ ಯುವಜನ ಸಂಘಟನೆ ಎಂದು ಗುರುತಿಸಲ್ಪಟ್ಟಿದೆ ಎಂದ ಅವರು, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಗಳ ಜೊತೆಗೆ ಎನ್‌ಎಸ್‌ಎಸ್‌ನಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು.
ವ್ಯಕ್ತಿತ್ವ ನಿರ್ಮಾಣಕ್ಕೆ ಒತ್ತು ನೀಡಿ ವಿಭಿನ್ನ ಆಲೋಚನಾ ಕ್ರಮವನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯತೆಯಾಗಿದ್ದು, ಸಡಿಲಗೊಳ್ಳುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಮಾರ್ಗವಾಗಿ ಎನ್‌ಎಸ್‌ಎಸ್ ಮಹತ್ವ ಪಡೆದಿದೆ ಎಂದು ತಿಳಿಸಿದರು.
ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ಅಧ್ಯಾಪಕರಾದ ಬಾಬುಸಾಬಿ, ವೆಂಕಟೇಶ್, ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.