ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯ ಬಳಿಕ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಟಿ. ವೆಂಕಟರಮಣಯ್ಯ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ದೇಶದಾದ್ಯಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಭ್ರಷ್ಟಾಚಾರದಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಶರಣಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಲಕ್ಷಾಂತರ ರೂಪಾಯಿಗೆ ಪ್ರಶ್ನೆಪತ್ರಿಕೆಗಳು ಮಾರಾಟವಾಗಿರುವ ಆರೋಪಗಳು ಕೇಳಿಬಂದಿದ್ದು, ಇಂತಹ ಘಟನೆ ದೇಶದ ಶಿಕ್ಷಣ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕ್ಯಾಮೆರಾ ಕಣ್ಗಾವಲು ಸೇರಿದಂತೆ ಕಟ್ಟುನಿಟ್ಟಿನ ಭದ್ರತೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಅದೇ ರೀತಿಯ ವ್ಯವಸ್ಥೆಯನ್ನು ರಾಷ್ಟ್ರೀಯ ಮಟ್ಟದಲ್ಲೂ ಅನುಸರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಮಾತನಾಡಿದ ಅವರು, ಉತ್ತಮ ದಿನಗಳನ್ನು ತರುತ್ತೇವೆ ಎಂದು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸಿಲ್ಲ ಎಂದು ಟೀಕಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಇಂಧನ ದರ ಕಡಿಮೆಯಾಗಿಲ್ಲ. ರೈತರು ಬಳಸುವ ಗೊಬ್ಬರದ ಬೆಲೆಯೂ ಹೆಚ್ಚಿದ್ದು, ಸಮರ್ಪಕ ಸಬ್ಸಿಡಿ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಆರ್. ನಾಯ್ಡು ಮಾತನಾಡಿ, ನೀಟ್ ಅಕ್ರಮದಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ವಿದ್ಯಾರ್ಥಿಗಳ ಸಮಸ್ಯೆಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಕಾಂಗ್ರೆಸ್ ನಿರಂತರ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್. ಗೌಡ ಮಾತನಾಡಿ, ನೀಟ್ ಅಕ್ರಮವನ್ನು ಖಂಡಿಸಿ ನಡೆಯುತ್ತಿರುವ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಹೋಬಳಿ ಮಟ್ಟದಲ್ಲೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮಿಪತಿ, ಮುಖಂಡರಾದ ಬಿ.ಜಿ. ಹೇಮಂತ್‌ರಾಜು, ಬೈರೇಗೌಡ, ಅಪ್ಪಿ ವೆಂಕಟೇಶ್, ಸಂದೀಪ್, ನಾಗರತ್ನಮ್ಮ, ರೇಣುಕಾ, ರುಕ್ಮಿಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

2 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

5 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

17 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

23 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

23 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago